ಬೆಂಗಳೂರು: ಹೊಸಗುಡ್ಡದಹಳ್ಳಿ ಬೆಂಕಿ ಅವಘಡ ಮಾಸುವ ಮುನ್ನವೇ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬೆಂಕಿ ಅವಘಡ ಕಾಣಿಸಿಕೊಂಡಿದೆ. ಹೆಚ್ಎಸ್ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಇಂದು ಮಧ್ಯಾಹ್ನ ಸರಿ ಸುಮಾರು 12.25ಕ್ಕೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಪಬ್ ತುಂಬೆಲ್ಲ ಆವರಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸುವುದಕ್ಕೆ ಹರಸಾಹಸ ಪಟ್ಟಿದ್ದಾರೆ.
ಕೆಲ ಸಮಯದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಪಬ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಪಬ್ ನಿಂದ ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.