ಧಾರವಾಡ : 2016 ರಲ್ಲಿ ನಡೆದ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಕೆಲ ಹೊತ್ತಿನ ಮುಂಚೆ ಸಿಬಿಐ ವಶಕ್ಕೆ ಪಡೆದಿದೆ.
ಧಾರವಾಡದ ಬಾರ್ರಕೋಟೆ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನ ವಶಕ್ಕೆ ಪಡೆಯಾಲಗಿದೆ. ಸದ್ಯ ಅವರನ್ನ ಅಲ್ಲಿನ ಉಪ ನಗರ ಪೊಲೀಸ್ ಠಾಣೆಯಲ್ಲಿ ಸಿಬಿಐ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ತಿಂಗಳ ಹಿಂದಷ್ಟೇ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರನ್ನ ಸಿಬಿಐ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ಮತ್ತು ಇದೇ ಸಮಯದಲ್ಲಿ ವಿನಯ್ ಕುಲಕರ್ಣಿ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಕೇಳಿ ಬಂದಿತ್ತು.
2016 ರಲ್ಲಿ ಯೋಗೇಶ್ ಗೌಡ ಎಂಬುವವರ ಕೊಲೆಯಾಗಿತ್ತು. ಅದೇ ಸಮಯದಲ್ಲಿ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದರು. ಈ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಹೆಸರೂ ಕೂಡಾ ಕೇಳಿ ಬಂದಿತ್ತು.ಸಚಿವ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಹ್ಲದಾ ಜೋಶಿ ಈ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕ , ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ವಶಕ್ಕೆ ಪಡೆದಿದ್ದಾರೆ. ಸದ್ಯ ಸಿಬಿಐ ತನಿಖಾಧಿಕಾರಿ ರಂಜನ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.