ಬೆಂಗಳೂರು: ಲಂಡನ್ ನಲ್ಲಿ ಹೊಸ ತಳಿಯ ಕೊರೋನಾ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ನಡುವೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಕೊರೋನಾ ಕುರಿತಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 772 ಕೊರೋನಾ ಕೇಸ್ ದಾಖಲಾಗಿದೆ.
ಇಂದು ದಾಖಲಾದ ಕೊರೋನಾ ಪ್ರಕರಣ ರಾಜ್ಯದಲ್ಲಿ ಈ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ಪ್ರಕರಣವಾಗಿದ್ದು, ಇದರೊಂದಿಗೆ ಇಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 9,10,241ಕ್ಕೆ ಏರಿಕೆಯಾಗಿದೆ .
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,016 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 1,261 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8.84 ಲಕ್ಷ ದಾಟಿದೆ. ಸದ್ಯ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 14,001ರಷ್ಟಿದ್ದು ಇದರಲ್ಲಿ 219 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.