ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಬಿದ್ದಿದ್ದು ನಾಳೆಯಿಂದ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ನಿವಾರ್ ಚಂಡಮಾರುತದ ಪರಿಣಾಮವಾಗಿ ಗಾಳಿಯ ವೇಗ ಪ್ರತೀ ಗಂಟೆಗೆ 120ರಿಂದ 130 ಕಿ.ಮೀ. ತಲುಪುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ-ನಗರದ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ನಿವಾರ ಚಂಡಮಾರುತ ಪರಿಣಾಮದಿಂದ ತಮಿಳುನಾಡಿನಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆಯಿಂದಲೇ ಥಂಡಿ ವಾತಾವರಣ ಸೃಷ್ಟಿಯಾಗಿದೆ.ಇನ್ನು ರಾಜ್ಯದ ಉತ್ತರ ಒಳನಾಡಿನ ಬಹತೇಕ ಜಿಲ್ಲೆಗಳಲ್ಲಿ ನ.28ರಂದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.
ಇನ್ನು ನಿವಾರ್ ಚಂಡಮಾರುತ ಪರಿಣಾಮವಾಗಿ ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಭಾರೀ ಮಳೆಯಾಗುತ್ತಿದ್ದು, ಚಂಡಮಾರುತದ ಹಿನ್ನೆಲೆಯಲ್ಲಿ ವಿಮಾನಯಾನ, ಬಸ್ ಸೇವೆ ಸೇರಿದಂತೆ ಹಲವು ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ .