ಮಡಿಕೇರಿ: ಇನ್ನೇನು ಕೆಲವೇ ದಿನಗಳಲ್ಲಿ ದಸರಾ ಮತ್ತು ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ನಡೆಯಲಿದ್ದು, ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ದಸರಾ ಸಮಿತಿ ಹಾಗೂ ತಲಕಾವೇರಿ-ಭಾಗಮಂಡಲ ವ್ಯವಸ್ಥಾಪನಾ ಸಮಿತಿ ಅವರ ಅಭಿಪ್ರಾಯ ಪಡೆದು ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದರು.
ಅ.17 ರಂದು ಕಾವೇರಿ ತೀರ್ಥೋದ್ಭವವಾಗಲಿದ್ದು
ದಸರಾ ಮತ್ತು ತಲಕಾವೇರಿ ಪವಿತ್ರ ತೀರ್ಥೋದ್ಭವವನ್ನು ಶ್ರದ್ಧಾಭಕ್ತಿಯಿಂದ ಸಾಂಪ್ರದಾಯಿಕವಾಗಿ ಆಚರಿಸಬೇಕಿದೆಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದಂತೆ ಹಣ ಬಿಡುಗಡೆಯಾಗಲಿದೆ. ಕರಗ ಉತ್ಸವದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಈ ಸಂಬಂಧ ಅಕ್ಟೋಬರ್, 14 ಮತ್ತು 15 ರಂದು ಕೋವಿಡ್ ಪರೀಕ್ಷೆ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ನಿರ್ದೇಶನ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕರಗ ಉತ್ಸವದಲ್ಲಿ ಪಾಲ್ಗೊಳ್ಳುವವರನ್ನು ಎರಡು ಬಾರಿ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಇಂತವರಿಗೆ ವೈದ್ಯಕೀಯ ಪ್ರಮಾಣ ಪತ್ರ ನೀಡಲಾಗುತ್ತದೆ. ದಸರಾ ಸಂದರ್ಭದ ವಿಜಯ ದಶಮಿಯಂದು ರಾತ್ರಿ 10 ಗಂಟೆಯೊಳಗೆ ಮಂಟಪ ಪೂಜಾ ಕಾರ್ಯಗಳು ಕೊನೆಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸುವುದು, ಅಂತರ ಕಾಯ್ದುಕೊಳ್ಳಬೇಕು. ಮಡಿಕೇರಿ ನಗರದಲ್ಲಿ ಬೀದಿ ದೀಪ ಅಳವಡಿಸುವಂತೆ ಪೌರಾಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.