ಬೆಂಗಳೂರು: ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಇಂದು ರಾತ್ರಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ದಕ್ಷಿಣ ಕೊಂಕಣ, ಗೋವಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಧಾರಣದಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವಾಗಿದ್ದು, ಅದು ಪಶ್ಚಿಮದಿಂದ ವಾಯುವ್ಯದೆಡೆಗೆ ಕಳೆದ ಆರು ಗಂಟೆಗಳಿಂದ ಗಂಟೆಗೆ 17 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದೆ. ಇಂದು ಬೆಳಗ್ಗೆ 5:30ಕ್ಕೆ ವಿಶಾಖಪಟ್ಟಣಂನಿಂದ ದಕ್ಷಿಣ-ನೈಋತ್ಯಕ್ಕೆ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಆಂಧ್ರಪ್ರದೇಶದ ಕಾಕಿನಾಡ ಸಮೀಪದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಗಂಟೆಗೆ 55 ರಿಂದ 65 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದ್ದು, ನಂತರ ಅದರ ತೀವ್ರತೆ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.