ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಟಫ್ ರೂಲ್ಸ್ ಫಾಲೋ ಮಾಡಲು ಮುಂದಾಗಿದೆ. ಮಾಸ್ಕ್ ಹಾಕದವರಿಗೆ ಇಷ್ಟು ದಿನ ಹಾಕುತ್ತಿದ್ದ ದಂಡಕ್ಕಿಂತ ದೊಡ್ಡ ಮಟ್ಟದಲ್ಲಿ ದಂಡ ವಿಧಿಸಲು ಮುಂದಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಹಿರಿಯ ಅಧಿಕಾರಿಗಳ ಶಿಪಾರಸಿನ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಪೂರ್ತಿಯಾಗಿ ಮಾಸ್ಕ್ ಧರಿಸದವರಿಗೂ ಸಹ ದಂಡ ಅನ್ವಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ, ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲೀಕರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು.
ಮಾರುಕಟ್ಟೆ, ಮಾಲ್, ಪಾರ್ಕ್ ಇತರೆ ಸಾರ್ವಜನಿಕ ಸ್ಥಳದಲ್ಲಿ 5 ಕ್ಕೂ ಹೆಚ್ಚು ಜನ ಗುಂಪುಗೂಡಿ ನಿಲ್ಲುವಂತಿಲ್ಲ. ಇವರ ನಡುವೆ ಸಹ ಕನಿಷ್ಠ 6 ಅಡಿ ಅಂತರವಿರಬೇಕು. ಇಲ್ಲವಾದರೆ ಆ ಸಂಸ್ಥೆ ಮಾಲೀಕರ ಮೇಲೆ ದಂಡ ಪ್ರಯೋಗ ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.
News In Brief: Penalty for not wearing masks in Karnataka’s urban areas increased to Rs 1,000: Dr. K Sudhakar